ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಅವರು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೆರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹೇಳಿಕೆ ನೀಡಿದ್ದಾರೆ.
ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಮಹಿಳೆಯರಿಗೆ ಸಾರಿಗೆ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ ಯೋಜನೆ’ ಜಾರಿಗೊಳಿಸಲಾಗಿದೆ. ಉಳಿದಂತೆ ಯುವನಿಧಿ, ಅನ್ನಭಾಗ್ಯ, ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳನ್ನೂ ಅನುಷ್ಠಾನಗೊಳಿಸಲಾಗಿದೆ. ಉಚಿತ ಯೋಜನೆಗಳ ಜಾರಿಯು ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಎಂದು ಅನೇಕ ಕಾಂಗ್ರೆಸ್ ನಾಯಕರೂ ಈಗಾಗಲೇ ಹೇಳಿದ್ದಾರೆ. ಆದಾಗ್ಯೂ, ಯೋಜನೆಗಳನ್ನು ಮುಂದುವರಿಸುವುದಾಗಿ ಸರ್ಕಾರ ಹೇಳಿದೆ.