ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಸೂಚನೆ ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ.
ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಿ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸಿ, ಮುಂಜಾಗ್ರತೆ ವಹಿಸಿದರೆ ಸಾಕು ಎಂದು ಸಲಹೆ ನೀಡಿದ್ದಾರೆ.
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ. ಸಲಹಾ ಸಮಿತಿ ಸೂಚನೆ ಮೇರೆಗೆ ರವಿವಾರ (ಮೇ.25) ದಿಂದ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ಮತ್ತೆ ಆರಂಭಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿಯೇ ಹೆಚ್ಚು ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.
ದಕ್ಷಿಣ ಏಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ JN.1 ರೂಪಾಂತರದ ವೈರಸ್ ಕಾರಣ ಎಂದು ತಿಳಿದು ಬಂದಿದೆ. ಈ ಬಾರಿಯ ಕೊರೋನಾದ ಲಕ್ಷಣ ಅಷ್ಟೇನು ತೀವೃವಾಗಿರುವುದಿಲ್ಲ. ಜ್ವರ, ಮೂಗು ಸೋರುವಿಕೆ, ಗಂಟಲು ನೋವು, ತಲೆನೋವು, ಆಯಾಸ, ಬಳಲಿಕೆ ಮುಂತಾದ ಲಕ್ಷಣಗಳು ಸೇರಿವೆ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ. ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಹಾಗೂ ಕೋವಿಡ್ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರವು ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆಮ್ಲಜನಕ ಸಿಲಿಂಡರ್‌ಗಳು, ಪರೀಕ್ಷಾ ಕಿಟ್‌ಗಳು ಮತ್ತು ಲಸಿಕೆಗಳ ಲಭ್ಯತೆಯನ್ನು ಕಾಯ್ದುಕೊಳ್ಳುವಂತೆ ನಿರ್ದೇಶಿಸಿದೆ. ಮೇ ತಿಂಗಳಲ್ಲಿ 273 ಕೋವಿಡ್ ಸೋಂಕುಗಳು ದಾಖಲಾಗಿದ್ದು, ಗರಿಷ್ಠ ಪ್ರಕರಣಗಳು ವರದಿಯಾಗಿವೆ, ಆದ್ದರಿಂದ ಆರೋಗ್ಯ ಸಚಿವರು ಎಲ್ಲಾ ಜಿಲ್ಲೆಗಳಲ್ಲಿ ಕಣ್ಗಾವಲು ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ. ಆಂಧ್ರಪ್ರದೇಶ ಮಾಸ್ಕ್ ಕಡ್ಡಾಯಗೊಳಿಸಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಮಾಸ್ಕ್ ಹಾಕಿಕೊಳ್ಳಲು ಸಲಹೆ ನೀಡಲಾಗಿದ್ದು, ರೋಗ ಲಕ್ಷಣ ಇದ್ದರೆ ಟೆಸ್ಟ್ ಮಾಡಿಸಲು ಸಲಹೆ ನೀಡಲಾಗಿದೆ.