ಮಂಗಳೂರು:ಕಡಲ ನಗರಿ ಮತ್ತೆ ಉದ್ವಿಘ್ನಗೊಂಡಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡವಾಗಿದ್ದ ಕರಾವಳಿ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಅಬ್ದುಲ್ ರಹಿಮಾನ್ ಹತ್ಯೆ ಬೆನ್ನಲ್ಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಕರಾವಳಿಯ ಮುಸ್ಲಿಂ ಮುಖಂಡರು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಅದರಲ್ಲೂ, ಮುಸ್ಲಿಂ ಮುಖಂಡರು ಸದ್ಯ ಗೃಹ ಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾಯಿಸಲು ಪಟ್ಟು ಹಿಡಿದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಬ್ಲ್ಯಾಕ್ಮೇಲ್ ಮಾಡಲು ಆರಂಭಿಸಿದ್ದಾರೆ. ಉಭಯ ಸಚಿವರ ಬದಲಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಮುಸ್ಲಿಂ ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂಗೆ ಡಿಕೆ ಶಿವಕುಮಾರ್ಗೆ ಭಾರೀ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳೂ ತಿಳಿಸಿವೆ.
ರಹಿಮಾನ್ ಹತ್ಯೆ ಬೆನ್ನಲ್ಲೇ ಗೃಹ ಇಲಾಖೆ ಕಾರ್ಯವೈಖರಿಗೆ ಮುಸ್ಲಿಂ ಮುಖಂಡರು ಕಿಡಿಕಾರಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮುಸ್ಲಿಂ ಸಮುದಾಯದ ನೋವು ಕೇಳುತ್ತಿಲ್ಲ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆ ಕಾರ್ಯ ವೈಫಲ್ಯಕ್ಕೂ ಕಾಂಗ್ರೆಸ್ನಲ್ಲಿರುವ ಮುಸ್ಲಿಂ ಮುಖಂಡರಿಂದ ವ್ಯಾಪಕ ಆಕ್ಷೇಪ ವ್ಯಕ್ತಪವಾಗಿದೆ. ನಮಗೆ ಓರ್ವ ಖಡಕ್ ಗೃಹ ಸಚಿವರು ಬೇಕು ಎಂದು ಅವರು ಪಟ್ಟು ಹಿಡಿದಿದ್ದಾರೆ. ಸಾಫ್ಟ್ ಹೋಂ ಮಿನಿಸ್ಟರ್ ಅವರಿಂದ ಮುಸ್ಲಿಮರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿದಿದ್ದಾರೆ.
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅಲ್ಲದೆ, ಪರ್ಯಾಯ ಪಕ್ಷ ಕಟ್ಟುವ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್ ರಾಜೀನಾಮೆ ನೀಡಿದ್ದಾರೆ. ಕೋಮುಹತ್ಯೆ ತಡೆಯಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈಯುಕ್ತಿಕ ಕಾರಣಕ್ಕೆ ಅಬ್ದುಲ್ ರಹಿಮಾನ್ ಕೊಲೆಯಾಗಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ಕೊಟ್ಟಿದ್ದಾರೆ. ಆ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ವಾಪಾಸ್ ಪಡೆಯಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.