ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದ್ದು ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ಎನ್ಐಎ ತಂಡ ನಡೆಸುತ್ತಿದ್ದು ಅದರಂತೆ ಇಂದು ಬೆಂಗಳೂರಿನಿಂದ ಆಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಮಾಹಿತಿಯೂ ಹೊರಬಿದ್ದಿದೆ.
ಮೇ.1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ. ಇನ್ನು ರಾಜಕೀಯ ಮತ್ತು ಸಾರ್ವಜನಿಕ ವಲಯದಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿತ್ತು.