ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಮಹತ್ವದ ಭರವಸೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಮಾಸ್ಕ್ಮ್ಯಾನ್ ಚಿನ್ನಯ್ಯ ಮಾಡಿರುವ ಆರೋಪ ಸಂಬಂಧಿತ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಬೇಕೆಂಬ ಆಗ್ರಹ ಹೆಚ್ಚಾದ ಬೆನ್ನಲ್ಲೇ, ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿತು.
ಗೃಹ ಸಚಿವ ಅಮಿತ್ ಶಾ ರ ದೆಹಲಿ ಕಚೇರಿಯಲ್ಲಿ ಭೇಟಿಯಾದ ಸ್ವಾಮೀಜಿಗಳು, ಧರ್ಮಸ್ಥಳ ಪ್ರಕರಣ ಕುರಿತು ಗೃಹ ಸಚಿವರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದರು. ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ಮಾಹಿತಿ ನೀಡಿದರು.
ಧರ್ಮಸ್ಥಳ ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಲಿದೆ. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನ ಜಾಗೃತಿಗೊಳಿಸಿ ಎಂದು ಸ್ವಾಮೀಜಿಗಳ ಬಳಿ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಸ್ವಾಮೀಜಿಗಳಿಂದ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದ ನಂತರ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದರು.
ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬರ್ಗಳಿಗೆ ವಿದೇಶಗಳಿಂದ ಹಣಕಾಸು ನೆರವು ಹರಿದು ಬಂದಿದೆ ಎಂಬ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ಈಗಾಗಲೇ ಪ್ರಾಥಮಿಕ ತನಿಖೆ ಆರಂಭಿಸಿದೆ. ಇದೀಗ ಎನ್ಐಎ ತನಿಖೆ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಶುಕ್ರವಾರ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಧರ್ಮ ಸಂರಕ್ಷಣಾ ಸಮಿತಿಯಿಂದ ಸಮಾವೇಶ ಆಯೋಜನೆ ಮಾಡಲಾಗುತ್ತಿದ್ದು ದೇವಸ್ಥಾನ, ದೈವಸ್ಥಾನ, ಬಸದಿಗಳ ಪ್ರಮುಖರು ಭಾಗಿಯಾಗಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯನ್ನು ಕೇಂದ್ರೀಕರಿಸಿ ಸಮಾವೇಶ ನಡೆಸಲಾಗುತ್ತಿದೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.