ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಡೇಡಿಯಂನಲ್ಲಿ ನಡೆದರೆ, ದ್ವಿತೀಯ ಪಂದ್ಯವು ಅಕ್ಟೋಬರ್ 10 ರಿಂದ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ನಾಳೆಯಿಂದ (ಅ.2) ಶುರುವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ.
ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.
ಐದನೇ ಕ್ರಮಾಂಕದಲ್ಲಿ ಈ ಬಾರಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಕರುಣ್ ನಾಯರ್ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ ಈ ಕ್ರಮಾಂಕದಲ್ಲಿ ಪಡಿಕ್ಕಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.
ಇನ್ನು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೆಲ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಣಕ್ಕಿಳಿಯಲಿದ್ದಾರೆ.
ಹಾಗೆಯೇ ವೇಗಿಗಳಾಗಿ ಈ ಬಾರಿ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಮಾತ್ರ ಕಾಣಿಸಿಕೊಳ್ಳಬಹುದು. ಏಕೆಂದರೆ ಅಹಮದಾಬಾದ್ ಪಿಚ್ ಸ್ಪಿನ್ ಬೌಲರ್ಗಳಿಗೆ ಸಹಕಾರಿ. ಹೀಗಾಗಿ ಸಿರಾಜ್ ಹಾಗೂ ಬುಮ್ರಾ ಮಾತ್ರ ವೇಗಿಗಳಾಗಿ ಕಣಕ್ಕಿಳಿಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಭಾರತ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.