ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ” ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದು ಅತ್ಯಂತ ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಬ್ಬ ಜನಪ್ರತಿನಿಧಿಯ ಬಗ್ಗೆ, ಅದರಲ್ಲೂ ಮಹಿಳಾ ಶಾಸಕಿಯ ವಿರುದ್ಧ ಈ ರೀತಿಯಲ್ಲಿ ಕೀಳುಮಟ್ಟದ ಪೋಸ್ಟ್ ಹಾಕಿರುವುದು ಅತ್ಯಂತ ಖಂಡನೀಯ. ವಿವೇಚನೆ ಇಲ್ಲದ ಅಭಿವ್ಯಕ್ತಿ ಮತ್ತು ಸಂಸ್ಕಾರವಿಲ್ಲದ ಟೀಕೆಗಳನ್ನು ನಾಗರಿಕ ಸಮಾಜ ಎಂದಿಗೂ ಒಪ್ಪಲು ಸಾಧ್ಯವಿಲ್ಲ; ಅವು ವಿಕೃತ ಮನಸ್ಸಿನ ಕೆಟ್ಟ ಆಲೋಚನೆಗಳ ಅತಿರೇಕರ ವರ್ತನೆಯಾಗಿದೆ. ಜಾಲತಾಣದಲ್ಲಿ ಜನಪ್ರತಿನಿಧಿಗಳನ್ನು ಈ ರೀತಿ ತೇಜೋವಧೆ ಮಾಡಿರುವುದು ಅತ್ಯಂತ ಗಂಭೀರ ವಿಚಾರ” ಎಂದು ಖೇದ ವ್ಯಕ್ತಪಡಿಸಿದ್ದಾರೆ
ಸಮಾಜದ ಸ್ವಾಸ್ಥ್ಯ ಕೆಡಿಸುವ ಇಂತಹ ಪೋಸ್ಟ್‌ಗಳು ಕೇವಲ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತವೆ. ಸಾಮಾಜಿಕ ಜಾಲತಾಣಗಳನ್ನು ಸದುಪಯೋಗಪಡಿಸಿಕೊಳ್ಳುವ ಬದಲು, ವ್ಯಕ್ತಿತ್ವ ಹರಣಕ್ಕೆ ಬಳಸುತ್ತಿರುವುದು ಅತ್ಯಂತ ವಿಷಾದನೀಯ ಎಂದು ಕ್ಯಾ. ಚೌಟ ಅವರು ಹೇಳಿದ್ದಾರೆ.

























