ಉಜಿರೆ: ನೀರಚಿಲುಮೆ ಬಳಿ ಬೈಕ್ ಮತ್ತು ಸರಕಾರಿ ಬಸ್ ಮಧ್ಯೆ ಭೀಕರ ಅಪಘಾತವಾಗಿರುವ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಎಂದು ತಿಳಿದುಬಂದಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸನತ್ (30) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರು ಮಡಂತ್ಯಾರು, ಪಾರೆಂಕಿ ಪಂಗಳ ನಿವಾಸಿ ಬಾಬು ಕುಲಾಲ್ ಅವರ ಪುತ್ರ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಪಘಾತದಿಂದಾಗಿ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು.
























