ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಜವಾದ್ (32 ವ.), ಸಾಹಿದ್ (32 ವ.) ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ (42 ವ) ಬಂಧಿತ ಆರೋಪಿಗಳು.
ವಿಟ್ಲ ಠಾಣಾ ವ್ಯಾಪ್ತಿಯ ಬಾಲಕನಿಗೆ 2026ರ ಫೆಬ್ರವರಿಯಿಂದ ಆಗಸ್ಟ್ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಸೆ.4 ರಂದು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪೋಕ್ಸೋ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಾಲಕನಿಗೆ ಆಮಿಷವೊಡ್ಡಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು 15ಕ್ಕೂ ಹೆಚ್ಚು ವ್ಯಕ್ತಿಗಳು ಪ್ರತ್ಯೇಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಬಾಲಕ ತೀವ್ರ ಅಸ್ವಸ್ಥಗೊಂಡು ಆತನ ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಾಗ ಪೋಷಕರು ವಿಚಾರಿಸಿದ್ದು, ಈ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣ ಪೋಷಕರು ಮಕ್ಕಳ ಸಹಾಯವಾಣಿ (1098) ಸಂಪರ್ಕಿಸಿ ದೂರು ನೀಡಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿ (CWC) ಅಧಿಕಾರಿಗಳು ಬಾಲಕನ ಹೇಳಿಕೆ ದಾಖಲಿಸಿಕೊಂಡು ನೀಡಿದ ನಿರ್ದೇಶನದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಕಾಯ್ದೆಯಡಿ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಸೆರೆಹಿಡಿದಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ 12ಕ್ಕೂ ಹೆಚ್ಚು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ. ಸಂತ್ರಸ್ತ ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.

























