ಮಂಗಳೂರು ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್‌ನನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ 76,000 ದಂಡ ವಿಧಿಸಿ ಗುರುವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶರಾದ ಜಗದೀಶ್ ವಿ.ಎನ್ ಅವರು ಈ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.
ಆರೋಪಿಗಳಾದ ಲಿತೇಶ್ ಪೂಜಾರಿ (ಸೂರಿಂಜೆ), ಶೋಭರಾಜ್ (ಸುರತ್ಕಲ್ ) , ಯುವರಾಜ್ (ಶಿಬರೂರು), ಪ್ರದೀಪ್ (ಉಳಾಯಿಬೆಟ್ಟು), ಉಮೇಶ್ ಕೊಂಬಾರು (ಸುಳ್ಯ ಬಾಳುಗೋಡು) ಜೀವಾವಧಿ ಶಿಕ್ಷೆಗೆ ಒಳಗಾದವರು
2026ರ ಜನವರಿ 28ರಂದು ಮಂಗಳೂರಿನ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಜಿಲ್ಲಾ ಕಾರಾಗೃಹದ (ಸಬ್ ಜೈಲು) ಒಳಗೆ ರೌಡಿಶೀಟರ್ ಮಾಡೂರು ಯೂಸುಫ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಲಿತೇಶ್ ಪೂಜಾರಿ, ಶೋಭರಾಜ್, ಯುವರಾಜ್, ಪ್ರದೀಪ್, ಉಮೇಶ್ ಕೊಂಬಾರ್, ಶರಣ್ ಪೂಜಾರಿ, ಮಹೇಶ್ ಕುಮಾರ್, ಕಮಲಾಕ್ಷ ಪೂಜಾರಿ, ಸತೀಶ್ ಪೂಜಾರಿ ಹಾಗೂ ಲತೀಶ್ ಸೇರಿದಂತೆ ಒಟ್ಟು 10 ಜನರ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಅಂದಿನ ಎಸಿಪಿ ತಿಲಕಚಂದ್ರ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (Charge sheet) ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದ ಬಳಿಕ, ಐವರು ಆರೋಪಿಗಳ ಮೇಲಿನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಅದೇ ಸಮಯದಲ್ಲಿ ಪ್ರಕರಣದಲ್ಲಿದ್ದ ಇತರ ಆರೋಪಿಗಳಾದ ಶರಣ್ ಪೂಜಾರಿ, ಮಹೇಶ್ ಕುಮಾರ್, ಕಮಲಾಕ್ಷ ಪೂಜಾರಿ, ಲತೀಶ್ ಹಾಗೂ ವಿಚಾರಣೆ ಹಂತದಲ್ಲೇ ಮೃತಪಟ್ಟ ಸತೀಶ್ ಪೂಜಾರಿ ಅವರನ್ನು ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ (ವಕೀಲ) ಮೋಹನ್ ಅವರು ಸುದೀರ್ಘ ವಾದ ಮಂಡಿಸಿದ್ದರು.


























