ಪುತ್ತೂರು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮತ್ತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ. ಬಿಜೆಪಿ ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತಿಗೆ ಹಾಗೂ ಹೊಸಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹಮ್ಮಿಕೊಂಡಿದ್ದ ‘ನಮ್ಮ ಹಕ್ಕಿಗಾಗಿ ನಮ್ಮ ಹೋರಾಟ ನಮ್ಮ ಹಕ್ಕು ನಮಗೆ ನೀಡಿ’ ಜನಾಂದೋಲನದ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ಪಂಚ ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮೊದಲ ದಿನದಿಂದಲೇ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರೂ. ಅವ್ಯವಹಾರ, ಮೂಡಾ ಹಗರಣ ಸೇರಿದಂತೆ ಹಲವು ಪ್ರಕರಣಗಳಿಂದ ರಾಜ್ಯದ ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಎಂದು ದೂರಿದರು. ವಿಧಾನ ಪರಿಷತ್ತಿನಲ್ಲಿ ತಾವು ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿದ ಉತ್ತರದ ಪ್ರಕಾರ ರಾಜ್ಯದ ವಿವಿಧ ಇಲಾಖೆಗಳಲ್ಲಿ ಎರಡು ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ದಕ್ಷಿಣ ಕನ್ನಡ ಜಿಲ್ಲೆಯ 200ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಲ್ಲಿ 300ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿದ್ದು, ಅಗತ್ಯ ಸಿಬ್ಬಂದಿಯ ಕೊರತೆಯಿಂದ ಪಂಚಾಯಿತಿ ಆಡಳಿತವೇ ಕುಸಿಯುವಂತಾಗಿದೆ.
ಬಡವರು ಮನೆ ನಿರ್ಮಾಣಕ್ಕೆ ಅನುಮತಿ ಪಡೆಯಲು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, 40ರಿಂದ 50 ಸಾವಿರ ರೂ. ಲಂಚ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಆರೋಪಿಸಿದರು. ಬಿಜೆಪಿ ಆಡಳಿತದ ಅವಧಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಮುತುವರ್ಜಿಯಿಂದ ನೂರಾರು ಮನೆಗಳು ಮಂಜೂರಾಗುತ್ತಿದ್ದವು. ಆದರೆ ಕಳೆದ ಮೂರು ವರ್ಷಗಳಲ್ಲಿ ಬಸವ ವಸತಿ ಹಾಗೂ ಅಂಬೇಡ್ಕರ್ ಆವಾಸ್ ಯೋಜನೆಯಡಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಜಿಲ್ಲೆಯಲ್ಲಿ 13,200ಕ್ಕೂ ಅಧಿಕ ಮಂದಿ ಮನೆಗಾಗಿ ಹಾಗೂ 22 ಸಾವಿರಕ್ಕೂ ಹೆಚ್ಚು ಮಂದಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಸರ್ಕಾರ ಮಾತ್ರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಟೀಕಿಸಿದರು.
ಯುವನಿಧಿ ಯೋಜನೆಯ ಹಣ ಯುವಕರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ಮೂರ್ನಾಲ್ಕು ತಿಂಗಳಿಂದ ಸ್ಥಗಿತಗೊಂಡಿದ್ದು, ವೃದ್ಧಾಪ್ಯ ಮತ್ತು ವಿಧವಾ ವೇತನಕ್ಕೂ ಕತ್ತರಿ ಹಾಕಲಾಗಿದೆ. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ ಯೋಜನೆಗಳ ಅನುಷ್ಠಾನದಲ್ಲೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಪಂಚಾಯತ್ ಮಟ್ಟದಲ್ಲಿ ಆರಂಭಿಸಿರುವ ಈ ಹೋರಾಟವನ್ನು ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಬದುಕಿನ ಮೇಲೆ ನಿರಂತರ ಆರ್ಥಿಕ ಹೊರೆ ಹೇರುತ್ತಿದೆ. ಹಾಲಿನ ದರವನ್ನು ಲೀಟರ್ಗೆ 8 ರೂ. ಹೆಚ್ಚಿಸುವ ಮೂಲಕ ಜನರಿಗೆ ಹೊರೆ ಉಂಟುಮಾಡಲಾಗಿದೆ. ಆಸ್ತಿ ನೋಂದಣಿ ಶುಲ್ಕವನ್ನು ಶೇ. 40ರಷ್ಟು ಹೆಚ್ಚಿಸಲು ಮುಂದಾಗಿದ್ದು, ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವನ್ನು ಪ್ರತಿ ಹಂತಕ್ಕೆ 4 ರೂ. ಹೆಚ್ಚಿಸುವ ಸಿದ್ಧತೆಯಲ್ಲಿದೆ. ಜನನ ಮತ್ತು ಮರಣ ಪ್ರಮಾಣಪತ್ರಗಳ ಶುಲ್ಕವನ್ನೂ ಹೆಚ್ಚಿಸಲಾಗಿದೆ ಎಂದು ಟೀಕಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರ ನೀಡುತ್ತಿದ್ದ 4 ಸಾವಿರ ರೂ. ಪ್ರೋತ್ಸಾಹಧನವನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸ್ಥಗಿತಗೊಳಿಸಿ ರೈತರಿಗೆ ಅನ್ಯಾಯ ಮಾಡಿದೆ. ಬಡವರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವ ಪ್ರಯತ್ನವೂ ನಡೆಯುತ್ತಿದೆ ಎಂದು ಆರೋಪಿಸಿದರು.



















