ಬೆಳ್ತಂಗಡಿ ವಿಧಾನ ಸಭಾ ಶಾಸಕ ಹರೀಶ್ ಪೂಂಜರನ್ನು ಬೆಳ್ತಂಗಡಿ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆಗೊಳಿಸಿದ್ದಾರೆ.
ಕಾರ್ಯಕರ್ತ ಶಶಿರಾಜ್ ಅವರ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಠಾಣೆ ಆಗಮಿಸಿದ ಸಂಧರ್ಭದಲ್ಲಿ ನಡೆದುಕೊಂಡ ರೀತಿ ಬಗ್ಗೆ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ, ಇವರನ್ನು ವಿಚಾರಣೆಗಾಗಿ ಠಾಣೆಗೆ ಕರೆತರಲು,ಬೆಳ್ತಂಗಡಿ ಠಾಣಾ ಪೊಲೀಸರು ಮನೆಗೆ ತೆರಳಿದ್ದು ಬೆಳಿಗ್ಗೆಯಿಂದ ಸಂಜೆಯ ತನಕ ಹೈಡ್ರಾಮ ನಡೆದಿತ್ತು.
ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳೀನ್ ಕುಮಾರ್ ಕಟೀಲ್ , ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದರು.
ಅದರಂತೆ ಸಂಸದರು ಆರೋಪಿತರಾದ ಹರೀಶ್ ಪೂಂಜಾರನ್ನು ಪೊಲೀಸರೊಂದಿಗೆ ಠಾಣೆಗೆ ಕಳುಹಿಸಿದ್ದಾರೆ.ಪ್ರಸ್ತುತ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ಠಾಣಾ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ.