ಬೀದರ್: ಇಲ್ಲಿನ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ 2 ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಹಿಂದೂ ವಿದ್ಯಾರ್ಥಿಗಳ ಮೇಲೆ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳಿಂದ ಬೀದರ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದ ಬಳಿ ಸೇರಿದ್ದ 300ಕ್ಕೂ ಅಧಿಕ ಹಿಂದೂ ಸಂಘಟನೆ ಕಾರ್ಯಕರ್ತರು ಅಂಬೇಡ್ಕರ್ ವೃತದಿಂದ ಡಿಸಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ರ‍್ಯಾಲಿಯಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾಕಾರರನ್ನು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ದ್ವಾರದ ಬಳಿಯೇ ತಡೆದ ಪೊಲೀಸರು ಇಲ್ಲೇ ಮನವಿ ಸಲ್ಲಿಸುವಂತೆ ತಾಕೀತು ಮಾಡಿದರು. ಬಳಿಕ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಪ್ರತಿಭಟನಾಕಾರರು, ಡಿಸಿ ಕಚೇರಿ ಮುಖ್ಯದ್ವಾರದ ಬಳಿಯೇ ಪ್ರತಿಭಟನೆ ನಡೆಸಲು ಮುಂದಾದರು. ಹಿಂದೂ ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ರದ್ದುಗೊಳಿಸದೇ ಇದ್ದರೆ ಜಿಲ್ಲೆಯಲ್ಲಿ ನಾವು ಶ್ರೀರಾಮನ ಅಭಿಯಾನ ಪ್ರಾರಂಭ ಮಾಡುತ್ತೇವೆ ಎಂದು ಪಟ್ಟು ಹಿಡಿದರು. ಬಳಿಕ ಡಿಸಿ ಗೋವಿಂದ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕ ಶರಣು ಸಲಗರ್, ಎಂಎಲ್‌ಸಿ ರಘುನಾಥ್ ಮಲ್ಕಾಪೂರೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಸೇರಿ ಹಿಂದೂ ಸಂಘಟನೆಯ ಪ್ರಮುಖರು ಭಾಗಿಯಾಗಿದ್ದರು. ಬೀದರ್ ನಗರದ ಕಾಲೇಜು ಒಂದರಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದು, ಹಿಂದೂ-ಮುಸ್ಲಿಂ ಸೇರಿದಂತೆ 17 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.