ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಎನ್‌ಡಿಎ (NDA) ಮೈತ್ರಿಕೂಟವು ಸರ್ಕಾರ ರಚಿಸಲು ಸಜ್ಜಾಗಿದೆ. ಎನ್‌ಡಿಎ ಮಿತ್ರಪಕ್ಷಗಳ ಜತೆ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದು, ನರೇಂದ್ರ ಮೋದಿ ಅವರಿಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಸೇರಿ ಹಲವು ನಾಯಕರು ಬೆಂಬಲ ಪತ್ರ ನೀಡಿದ್ದಾರೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರು ಜೂನ್ 7ರಂದು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಎನ್‌ಡಿಎ ಸಭೆಯಲ್ಲಿ ಎಲ್ಲ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಜೂನ್ 7ರಂದು ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೋದಿ ಅವರ ಜತೆಗೆ ಸಚಿವರಾಗಿ 21 ಸಂಸದರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು ಜೂನ್ 8ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈಗ ಒಂದು ದಿನ ಮುಂಚಿತವಾಗಿ ಅಂದರೆ ಶುಕ್ರವಾರವೇ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಎನ್‌ಡಿಎ ಸಭೆಯಲ್ಲಿಯೇ ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.