ತುಮಕೂರು: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಬಿಯರ್ ಬಾಟೆಲ್‍ನಿಂದ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಮಧುಗಿರಿ ಪೊಲೀಸರು ಗುಂಡೇಟು ನೀಡಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಇಂದು (ಜೂ.24) ಖಚಿತ ಮಾಹಿತಿ ಮೇರೆಗೆ ಪೊಲಿಸರು ಎ2 ಆರೋಪಿ ರಿಜ್ವಾನ್‍ನನ್ನ ಈಜೀಹಳ್ಳಿ ಕ್ರಾಸ್ ಬಳಿ ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿ, ಪೊಲೀಸ್ ಸಿಬ್ಬಂದಿ ರಮೇಶ್ ಎಂಬವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಆರೋಪಿಗೆ ಶರಣಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಆದರೆ ಆರೋಪಿ ಶರಣಾಗಲು ನಿರಾಕರಿಸಿ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಒಟ್ಟು 15 ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ. ಮಧುಗಿರಿ 3, ಮಿಡಗೇಶಿ 4, ಬಡವನಹಳ್ಳಿ 2, ಕೊರಟಗೆರೆ 1, ಕೊಡಿಗೇನಹಳ್ಳಿ 2 ಮಡಕಶಿರಾ 1, ಪಟ್ಟನಾಯಕನಹಳ್ಳಿ 2, ಗೌರಿಬಿದನೂರು 1 ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರತ್ಯೇಕವಾಗಿ ಆರೋಪಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಗಾಯಾಳು ಪೊಲೀಸ್ ಸಿಬ್ಬಂದಿ ರಮೇಶ್‍ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಹಾಗೂ ಆರೋಪಿ ರಿಜ್ವಾನ್‍ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.