ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಶವಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು, ಗ್ರಾಮಸ್ಥರು ಆಗ್ರಹಿಸಿ ಕಾರಣ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ.
ಶುಕ್ರವಾರ ಮುಂಜಾನೆ ಭೀಕರ ಅಪಘಾತ ನಡೆದು 13 ಮಂದಿ ಸಾವನ್ನಪ್ಪಿದ್ದರೂ ಜಿಲ್ಲಾಸ್ಪತ್ರೆಗೆ ಯಾರೂ ಜನಪ್ರತಿನಿಧಿಗಳು ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಸರ್ಕಾರದಿಂದ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಪರಿಹಾರ ನೀಡದಿದ್ದರೆ ಶವಾಗಾರದಿಂದ ಶವ ತೆಗೆದುಕೊಂಡು ಹೋಗಲ್ಲ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಮೊದಲಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪವನ್ನಷ್ಟೇ ತಿಳಿಸಿದ್ದರು. ಬಳಿಕ ಪರಿಹಾರ ಘೋಷಣೆ ಮಾಡಿದ್ದಾರೆ.
ಇದರ ಬೆನ್ನಲ್ಲೇ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ವೈಯಕ್ತಿಕವಾಗಿ ತಲಾ 50 ಸಾವಿರ ಪರಿಹಾರ ನೀಡಿದ್ದಾರೆ. 13 ಜನರಿಗೆ 6.50 ಲಕ್ಷ ವೈಯಕ್ತಿಕ ಪರಿಹಾರ ನೀಡಿದ್ದಾರೆ. ಹಾವೇರಿ ಜಿಲ್ಲಾ ಕಾಂಗ್ರೇಸ್ ಮುಖಂಡರ ಮೂಲಕ ಪರಿಹಾರದ ಹಣ ಹಸ್ತಾಂತರ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದಿಂದ 17 ಜನ ಪ್ರಯಾಣ ಟಿಟಿ ವಾಹನದಲ್ಲಿ ಮಾಡುತ್ತಿದ್ದರು. 13 ಜನರ ಸಾವಿಗೀಡಾಗಿದ್ದು, 4 ಜನ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾಬಾಯಿ (57), ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸಹ ಮೃತಪಟ್ಟಿದ್ದಾರೆ. ಅರ್ಪಿತಾ, ಅರುಣಾ, ಅನ್ನಪೂರ್ಣ ಆಸ್ಪತ್ರೆಯಲ್ಲಿರುವ ಗಾಯಾಳುಗಳು.