ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ.
ಹವಾಮಾನ ಸ್ಥಿತಿಯ ಪ್ರಕಾರ ಪೂರ್ವ ಅರಬ್ಬೀ ಸಮುದ್ರದ ಗುಜರಾತ್,ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಉದ್ದಕ್ಕೂ ದಟ್ಟ ಮೋಡ ಇರುವ ಕಾರಣ ಮಳೆಯಾಗುತ್ತಿದೆ.
ಜುಲೈ 19 ರಂದು ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಆಗುವ ಹೆಚ್ಚಿನ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಜುಲೈ 17 ರಿಂದ ಜುಲೈ 21 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಇಂದು ಮತ್ತು ಜುಲೈ 17 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಅತಿ ಭಾರೀ ಮಳೆಯ ಹಿನ್ನಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮುನ್ನೆಚ್ಚರಿಕೆ ನೀಡಲಾಗಿದೆ. ಭೂಕುಸಿತ, ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಗಾಳಿ, ಮಳೆಯ ಒತ್ತಡ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ.