ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಗಿಬಿದ್ದಿದ್ದು, ರಾಜ್ಯಪಾಲರ ಕೂಡ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಗಿಬಿದ್ದಿದ್ದು, ರಾಜ್ಯಪಾಲರ ಕೂಡ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ನ್ಯಾಯಾಲಯದಲ್ಲಿ ಹೋರಾಟ ಮಾಡಲು ನಿರ್ಧರಿಸಿದೆ.
ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ದೆಹಲಿಯಲ್ಲಿ ಭೇಟಿಯಾದರು. ಭೇಟಿ ವೇಳೆ ಸಿದ್ದರಾಯ್ಯ ಅವರಿಗೆ ಬೆಂಬಲ ನೀಡಲು ಹೈಕಮಾಂಡ್ ನಿರ್ಧರಿಸಿದ್ದು, ನ್ಯಾಯಾಲಯದಲ್ಲಿ ಹೋರಾಟ ನಡೆಸಲು ಹಲವು ಮಾರ್ಗಗಳ ಕುರಿತಂತೆ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿ, ಕಾನೂನಾತ್ಮಕ ಹೋರಾಟವನ್ನು ಮುಂದುವರಿಸುವುದಲ್ಲದೆ, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ನಾಯಕ ಎಂಬ ಕಾರಣಕ್ಕೆ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಬಿಂಬಿಸಿ ರಾಜ್ಯ ಹಾಗೂ ರಾಷ್ಟ್ರ ಪಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಲು ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಸಭೆ ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ರಾಜ್ಯಪಾಲರ ಆದೇಶವು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ, ರಾಜಕೀಯ ಪ್ರೇರಿತವಾಗಿದೆ. ನಾವು ನ್ಯಾಯಾಲಯದಲ್ಲಿ ಇದರ ವಿರುದ್ಧ ಹೋರಾಡುತ್ತೇವೆ. ನ್ಯಾಯಾಲಯ ನಮಗೆ ಸಂಪೂರ್ಣ ನಂಬಿಕೆ ಇದೆ. ಕರ್ನಾಟಕದ ಜನತೆ ನಮ್ಮೊಂದಿಗಿದ್ದಾರೆ. ನಮಗೆ ಸಂವಿಧಾನದ ಮೇಲೆ ಸಂಪೂರ್ಣ ನಂಬಿಕೆ ಇದೆ, ಕಾನೂನು ನಮ್ಮ ಕಡೆ ಇದೆ ಎಂದು ನಂಬಿದ್ದೇವೆ. ಹೈಕೋರ್ಟ್ ಮತ್ತು ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳ ಮೆಟ್ಟಿಲೇರುತ್ತೇವೆ. ರಾಷ್ಟ್ರಪತಿಗಳ ಭೇಟಿಯಾಗುವುದು ಸೇರಿದಂತೆ ಸಾಕಷ್ಟು ಆಯ್ಕೆಗಳು ನಮ್ಮ ಮುಂದಿವೆ ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸುಳಿವನ್ನೂ ನೀಡಿದರು.