ಸಂಸದ ಕೋಟ ಶ್ರೀನಿವಾಸ ಪೂಜಾರಿ ಆವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ ಸದ್ಯ ಕಗ್ಗಂಟಾಗಿದೆ. ಪ್ರಮೋದ್ ಮಧ್ವರಾಜ್, ಅರುಣ್ ಪುತ್ತಿಲ ಹೆಸರು ಮಂಚೂಣಿಯಲ್ಲಿದೆ. ಆದರೆ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಯ್ಕೆಗೆ ಕಾರ್ಯಕರ್ತರ ವಲಯದಲ್ಲಿ ಅಪಸ್ವರ ಕೇಳಿಬಂದಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಳೆದ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದೊಂದು ಸ್ಥಾನಗಳನ್ನು ಪಡೆದುಕೊಂಡಿದ್ದವು. ಬಿಜೆಪಿಯಿಂದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಮಂಜುನಾಥ ಭಂಡಾರಿ ಗೆಲುವು ಕಂಡಿದ್ದರು. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆಲುವು ಕಂಡಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಇದೀಗ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಿದೆ. ಆದರೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್‌ಗಳಿಗೆ ಅವಧಿ ಮುಗಿದಿದ್ದರೂ ಕೂಡ ಚುನಾವಣೆ ನಡೆದಿಲ್ಲ. ಹೀಗಾಗಿ ಹಾಲಿ ಸದಸ್ಯರೇ ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸ್ಥಳೀಯ ಸಂಸ್ಥೆಗಳ ಒಟ್ಟು ಮತದಾರರ ಲೆಕ್ಕಾಚಾರದಲ್ಲಿ ಬಿಜೆಪಿ ಗೆಲುವು ದಾಖಲಿಸುವುದು ಖಚಿತ.
ಇದೇ ಕಾರಣದಿಂದಲೇ ವಿಧಾನ ಪರಿಷತ್ ಸ್ಥಾನಕ್ಕಾಗಿ ಬಾರೀ ಪೈಪೋಟಿ ಏರ್ಪಟ್ಟಿದೆ. ಉಡುಪಿ ಭಾಗದಿಂದ ಪ್ರಮೋದ್ ಮಧ್ವರಾಜ್ ಅವರ ಹೆಸರು ಮಂಚೂಣಿಯಲ್ಲಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಿಂದ ಅರುಣ್ ಪುತ್ತಿಲ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ಈ ಇಬ್ಬರ ಪೈಕಿ ಓರ್ವರಿಗೆ ಟಿಕೆಟ್ ಖಚಿತ ಎನ್ನಲಾಗುತ್ತಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸಂಸದ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಲಾಭಿ ನಡೆಸುತ್ತಿದ್ದಾರೆ.
ಆದರೆ ನಳಿನ್ ಕುಮಾರ್ ಅವರ ಆಯ್ಕೆಗೆ ಬಿಜೆಪಿ ಕಾರ್ಯಕರ್ತರು, ಮುಖಂಡರ ವಲಯದಲ್ಲಿ ಅಪಸ್ವರ ಕೇಳಿಬಂದಿದೆ. ಹೀಗಾಗಿ ನಳಿನ್ ಕುಮಾರ್ ಕಟೀಲು ಅವರಿಗೆ ಮಣೆ ಹಾಕುವ ಸಾಧ್ಯತೆ ತೀರಾ ಕಡಿಮೆ. ಇನ್ನು ಅವಳಿ ಜಿಲ್ಲೆಗಳಲ್ಲಿ ಬಿಲ್ಲವ ಸಮುದಾಯಕ್ಕೆ ಬಿಜೆಪಿ ಈ ಬಾರಿ ಮಣೆ ಹಾಕಲು ಮುಂದಾದ್ರೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲಗೆ ಲಕ್ ಖುಲಾಯಿಸುವ ಸಾಧ್ಯತೆಯಿದೆ.