ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಅಕ್ಟೋಬರ್ 5 ರಂದು SIT ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಶಾಸಕ ಮುನಿರತ್ನ SIT ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ SIT ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದು, ಮತ್ತೆ ಮುನಿರತ್ನ ಅವರನ್ನು ಕಸ್ಟಡಿಗೆ ನೀಡುವಂತೆ SIT ಅಧಿಕಾರಿಗಳು ಕೋರ್ಟ್ ಗೆ ಮನವಿ ಮಾಡಿದರು ಆದರೆ, ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್ ಗೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟಿನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.
ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎನ್ ಮುನಿರತ್ನ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 40 ವರ್ಷ ಪ್ರಾಯದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.