ನಯಾಬ್ ಸಿಂಗ್ ಸೈನಿ ಅಕ್ಟೋಬರ್ 15 ರಂದು ಹರಿಯಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹರಿಯಾಣದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಚಂಡೀಗಢ ಸಮೀಪದ ಪಂಚಕುಲದಲ್ಲಿ ನಡೆಯಲಿದೆ. ಪಂಚಕುಲದಲ್ಲಿ ನಡೆಯಲಿರುವ ಮೆಗಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿಯ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಅಕ್ಟೋಬರ್ 14 ರಂದು ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ, ಇದರಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸಿಎಂ ಮುಖವಾಗಿದ್ದ ಸೈನಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಈ ವರ್ಷದ ಮಾರ್ಚ್‌ನಲ್ಲಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಿದ ಪಕ್ಷವು ಗೆದ್ದರೆ ಇತರ ಹಿಂದುಳಿದ ವರ್ಗಗಳ(ಒಬಿಸಿ) ಸೈನಿ ಅವರು ಉನ್ನತ ಹುದ್ದೆಗೆ ಆಯ್ಕೆಯಾಗುತ್ತಾರೆ ಎಂದು ಹೇಳಲಾಗಿತ್ತು.
ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೇರಿದೆ. ಒಟ್ಟು 90 ಸ್ಥಾನಗಳಲ್ಲಿ 48 ಅನ್ನು ಗೆಲ್ಲುವ ಮೂಲಕ ಇತಿಹಾಸ ಬರೆದಿದೆ. ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ 37 ಸ್ಥಾನ, ಭಾರತೀಯ ರಾಷ್ಟ್ರೀಯ ಲೋಕದಳ ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಚುನಾಯಿತರಾದ ಮೂವರು ಸ್ವತಂತ್ರ ಅಭ್ಯರ್ಥಿಗಳು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದಾರೆ.