ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ.
ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು “ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು” ತನಿಖೆ ಮಾಡಲು “ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ” ಎಂದು ಶನಿವಾರ ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ.
ಧರ್ಮಸ್ಥಳ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ಮಾಡಿಕೊಂಡಿದ್ದ ವ್ಯಕ್ತಿ ನೂರಾರು ಅಪರಿಚಿತ ಶವ ಹೂತಿದ್ದೇನೆ ಎಂದು ಹೇಳುತ್ತಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತು.ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಸಿಎಂ ಗೆ ಮನವಿ ಸಲ್ಲಿಸಿದ್ದರು.
ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ.
ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ.