ಚೆನ್ನೈ: ಕರೂರಿನಲ್ಲಿ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ದಳಪತಿ ವಿಜಯ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯ್, ನನ್ನ ಹೃದಯ ಚೂರಾಗಿದೆ. ನಾನು ಅಸಹನೀಯ ನೋವು ಮತ್ತು ದುಃಖದಲ್ಲಿದ್ದೇನೆ. ಹೇಳಿಕೊಳ್ಳಲಾಗದಷ್ಟು ನೋವು ಎಂದು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.
ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ, ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವೇ ಗುಣಮುಖರಾಗಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ವಿಜಯ್ ತಿಳಿಸಿದ್ದಾರೆ.
ತಮಿಳುನಾಡು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಬೃಹತ್ ರ‍್ಯಾಲಿ ನಡೆಸಿದ್ದರು. ವಿಜಯ್ ನೋಡಲೆಂದು ಲಕ್ಷಾಂತರ ಸಂಖ್ಯೆಯಲ್ಲಿ ಜನ ನೆರೆದಿದ್ದರು. ಈ ವೇಳೆ ಭೀಕರ ಕಾಲ್ತುಳಿತ ಸಂಭವಿಸಿದೆ. 35ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರುತ್ತಿದೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.