ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ತಿಳಿಸಿದ್ದು, ವಿಚಾರಣೆಯನ್ನು ಅ.29ಕ್ಕೆ ಕೋರ್ಟ್ ಮುಂದೂಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಆರೋಪ ಸಂಬಂಧ ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲಾಗಿತ್ತು. ಈ ಬಗ್ಗೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಬಲವಂತದ ಕ್ರಮ ಬೇಡ ಎಂದಿದೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಭಾಷಣ ಮಾಡಿದ್ದರು. ಅವರು ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿ ಮಾತನಾಡಿದ್ದಾರೆ ಎಂದು ಆರೋಪಿಸಿ ಈಶ್ವರಿ ಪದ್ಮುಂಜ ಎಂಬುವರು ನೀಡಿದ್ದ ದೂರಿನ ಅನ್ವಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಿಎನ್ಎಸ್ 79, 196, 299, 302, 3(5) ಅಡಿ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅ. 30ರಂದು ವಿಚಾರಣೆಗೆ ಹಾಜರಾಗುವಂತೆ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೋಟಿಸ್ ನೀಡಲಾಗಿತ್ತು. ಇದನ್ನ ಪ್ರಶ್ನಿಸಿ ಪ್ರಭಾಕರ್ ಭಟ್ ಕೋರ್ಟ್ ಮೊರೆ ಹೋಗಿದ್ದರು.
ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಡಾ.ಪ್ರಭಾಕರ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿದ್ದರು.ಈ ನಡುವೆ ಡಾ.ಪ್ರಭಾಕರ ಭಟ್ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ಜಿಲ್ಲಾ ನ್ಯಾಯಾಲಯ ಮುಂದಿನ ಆದೇಶದ ತನಕ ಯಾವುದೇ ಬಲವಂತದ ಕಾನೂನು ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಮಧ್ಯಂತರ ಆದೇಶ ಮಾಡಿದೆ.ಡಾ.ಪ್ರಭಾಕರ ಭಟ್ ಅವರ ಪರವಾಗಿ ನ್ಯಾಯವಾದಿ ಮಹೇಶ್ ಕಜೆ ವಾದಿಸುತ್ತಿದ್ದಾರೆ.























