ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತೆಯ ಭಾವನೆ ಮೂಡಿಸುವ ಉದ್ದೇಶದಿಂದ ಆಗಸ್ಟ್ 24ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿಗಳು ಸ್ವಾಭಾವಿಕವಾಗಿ ಮುಚ್ಚಿರಲಿವೆ. ಆದರೆ ಇದರ ಹೊರತಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗಿದೆ.
ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ ಪೊಲೀಸರು ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಹಿಂದಿನ ಹಲವು ಪ್ರಕರಣಗಳಲ್ಲಿಯೂ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವವನ್ನು ಪರಿಗಣಿಸದೆ ಪೊಲೀಸರು ನೋಟಿಸ್ ಸೇರಿದಂತೆ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಯಾರಿಗಾದರೂ ಯಾವುದೇ ಅನುಮಾನ ಅಥವಾ ಚರ್ಚೆಯ ಅಗತ್ಯವಿದ್ದರೆ, ಪೊಲೀಸರೊಂದಿಗೆ ಮುಕ್ತವಾಗಿ ಚರ್ಚಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
























