ಪುತ್ತೂರು: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಿಕ್ಷಾ ಚಾಲಕನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಮಹಿಳೆಯೊಬ್ಬರು ಸೆ.9ರಂದು ಬೆಳಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದರು. ಈ ವೇಳೆ ಪರಿಚಯದ ಬಾಲಕೃಷ್ಣ ಎಂಬವರು ಚಾಲಕರಾಗಿರುವ ಕೆಎ-21-ಬಿ-2011 ನೋಂದಣಿ ಸಂಖ್ಯೆಯ ಆಟೋ ರಿಕ್ಷಾದಲ್ಲಿ ಪುತ್ತೂರು ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.
ಮಾರ್ಗಮಧ್ಯೆ ರಿಕ್ಷಾ ಚಾಲಕನು ನಿಗದಿತ ಮಾರ್ಗ ಬದಲಿಸಿ ಕುರಿಯ ಎಂಬಲ್ಲಿಗೆ ರಿಕ್ಷಾವನ್ನು ಕೊಂಡೊಯ್ದು ನಿಲ್ಲಿಸಿ, ಬಳಿಕ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 74, 75 ಹಾಗೂ 64ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಲಕೃಷ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

























