ದೆಹಲಿ: 2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಸ್ ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ. ಹೊಸದಾಗಿ ತನಿಖೆಗೆ ಕೋರ್ಟ್ ಆದೇಶಿಸಿದ್ದು, 3 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಆ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ಈ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ.
ಸೌಜನ್ಯ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ನಿರ್ದೇಶನ ನೀಡಿದ್ದು, ಹೊಸ ತಂಡದಿಂದ ಸ್ವತಂತ್ರವಾಗಿ ಮರು ತನಿಖೆ ನಡೆಸುವಂತೆ ಸೂಚಿಸಿದೆ.
2012 ರ ಅಕ್ಟೋಬರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಉಜಿರೆ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ 17 ವರ್ಷದ ಸೌಜನ್ಯಾಳನ್ನು ಅಪಹರಿಸಿ, ಅತ್ಯಾಚಾರ ಎಸಗಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಲಾಗಿತ್ತು. ಘಟನೆ ನಡೆದ ಕೆಲವು ದಿನಗಳ ನಂತರ ಪೊಲೀಸರು ಸಂತೋಷ್ ರಾವ್ ಎಂಬಾತನನ್ನು ಮುಖ್ಯ ಆರೋಪಿಯನ್ನಾಗಿ ಬಂಧಿಸಿದ್ದರು. ಸಾರ್ವಜನಿಕರ ತೀವ್ರ ಆಕ್ರೋಶ ಮತ್ತು ಪ್ರತಿಭಟನೆಗಳ ನಂತರ, ಪ್ರಕರಣವನ್ನು ಮೊದಲು ಸಿಐಡಿ (CID) ಮತ್ತು ನಂತರ ಕೇಂದ್ರ ತನಿಖಾ ದಳಕ್ಕೆ (CBI) ವಹಿಸಲಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಆತನನ್ನು ಖುಲಾಸೆಗೊಳಿಸಿತ್ತು.
ಸಿಬಿಐ ತನಿಖೆಯಲ್ಲಿ ಲೋಪದೋಷಗಳಿದ್ದು, ನೈಜ ಆರೋಪಿಗಳನ್ನು ರಕ್ಷಿಸಲಾಗಿದೆ ಎಂದು ಆರೋಪಿಸಿ ಸೌಜನ್ಯಾಳ ತಾಯಿ ಕುಸುಮಾವತಿ ಅವರು ಮರುತನಿಖೆಗೆ ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ತನಿಖಾ ಸಂಸ್ಥೆಯ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮರುತನಿಖೆ ನಡೆಸುವಂತೆ ಈಗ ಆದೇಶ ಹೊರಡಿಸಿದೆ.
























