ಮಂಗಳೂರು: ಬೀಚ್ನಲ್ಲಿ ಪ್ರೇಮಿಗಳಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವಕನ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ಡೆತ್ನೋಟ್ ಕೂಡ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಆರೋಪಿತ ಅಪರಾಧಕ್ಕೆ ಮೂರು ವರ್ಷಗಳಿಗಿಂತ ಕಡಿಮೆ ಶಿಕ್ಷೆ ವಿಧಿಸುವ ಅವಕಾಶವಿದ್ದ ಹಿನ್ನೆಲೆಯಲ್ಲಿ, ಕಾನೂನು ಪ್ರಕ್ರಿಯೆಯಂತೆ ಯುವಕನನ್ನು ಬಂಧಿಸುವ ಬದಲು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು ಎನ್ನಲಾಗಿದೆ.
ಆದರೆ, ಮಂಗಳವಾರ ಬೆಳಗ್ಗೆ ಯುವಕ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಇನ್ನು ಘಟನಾ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ, ತನ್ನ ನಿರ್ಧಾರಕ್ಕೆ ತಾನೇ ಹೊಣೆ ಎಂದು ಯುವಕ ಬರೆದಿಟ್ಟಿರುವುದಾಗಿ ವರದಿಯಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸುರತ್ಕಲ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಬೀಚ್ನಲ್ಲಿ ನಡೆದ ಕಿರುಕುಳದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ಬೆನ್ನಲ್ಲೇ ಯುವಕನ ಸಾವು ಸಂಭವಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.























