ಜೂನ್ 01 ರಿಂದ 29 ವರೆಗೂ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾಗಿಯಾಗುತ್ತಿರುವ ಎರಡು ತಂಡಗಳ ಜೆರ್ಸಿ ಮೇಲೆ ಕೆಎಂಎಫ್ ಲೋಗೋ ಅನಾವರಣಗೊಳ್ಳಲಿದೆ. ಅಲ್ಲದೇ ಪಂದ್ಯಾವಳಿ ಸಮಯದಲ್ಲಿ ಜಾಹೀರಾತು, ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಸಿಗಲಿದೆ. ಪರಿಣಾಮ ಜಾಗತಿಕ ಮಟ್ಟದಲ್ಲಿ ನಂದಿನಿ ಉತ್ಪನ್ನಗಳ ಪ್ರಚಾರ ಲಭ್ಯವಾಗಲಿದೆ. ಸಣ್ಣ ತಂಡಗಳೊಂದಿಗೆ ಪಾಲುದಾರಿಕೆ ಮಾಡುವ ಮೂಲಕ ಕಡಿಮೆ ವೆಚ್ಚದಲ್ಲಿ ಬ್ರ್ಯಾಂಡ್ ಮಾಡಲು ಕೆಎಂಎಫ್ ಮುಂದಾಗಿದೆ.
ಈ ಕುರಿತಂತೆ ಮನಿ ಕಂಟ್ರೋಲ್ ಜೊತೆಗೆ ಮಾತನಾಡಿರುವ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಎರಡು ತಿಂಗಳಿಗೆ ಪ್ರಾಯೋಜಿಕತ್ವ ವಹಿಸಲು ನಾವು ಏಪ್ರಿಲ್ 20 ರಂದು ITW ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ಗೆ ವರ್ಕ್ ಆರ್ಡರ್ ನೀಡಲಾಗಿದೆ. ತಂಡದ ಜರ್ಸಿಯಲ್ಲಿ ನಂದಿನಿ ಲೋಗೋ ಇರಲಿದೆ. ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳಿಗೆ ಎಡಗೈ ಜೆರ್ಸಿ ಮೇಲೆ ನಂದಿನಿ ಲೋಗೋ ಇರಲಿದೆ. ಎರಡು ತಂಡಗಳು ನಮ್ಮ ಜಾಹೀರಾತುಗಳು, ಸೋಶಿಯಲ್ ಮೀಡಿಯಾ ಕ್ಯಾಂಪೇನ್, ಫೋಟೋ ಶೂಟ್ ಮತ್ತು ನಮ್ಮ ಉತ್ಪನ್ನಗಳನ್ನು ಲೋಗೋ ಇರಲಿದೆ. ಇದನ್ನು ನಾವು ಪಂದ್ಯಾವಳಿಯ ಸಮಯದಲ್ಲಿ ಪ್ರಸಾರ ಮಾಡುತ್ತೇವೆ. ಇದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಲಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಬರೆದುಕೊಂಡಿದ್ದಾರೆ.