70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ(ಜೂ.28) ಹೇಳಿದ್ದಾರೆ.
ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಅದರ ಅನ್ವಯ 70 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯುತ್ತಾರೆ’ ಎಂದರು.
ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿ 55 ಕೋಟಿ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ.
ದೇಶದಲ್ಲಿ 25,000 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವ ಕೆಲಸ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದರು. ಆಯುಷ್ಮಾನ್ ಭಾರತವು ವಿಶ್ವದಲ್ಲೇ ಅತಿ ದೊಡ್ಡ ಸರ್ಕಾರಿ ಆರೋಗ್ಯ ವಿಮಾ ಯೋಜನೆ ಆಗಿದೆ. 12 ಕೋಟಿ ಕುಟುಂಬಗಳಿಗೆ ಪ್ರತೀ ವರ್ಷಕ್ಕೆ ತಲಾ 5 ಲಕ್ಷರೂ. ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುವ ಗುರಿ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.