ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು.
ಮೊದಲ ಓವರ್ನಿಂದಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಶರ್ಮಾ ಝಿಂಬಾಬ್ವೆ ಬೌಲರ್ಗಳ ಬೆಂಡೆತ್ತಿದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ರುತುರಾಜ್ ಗಾಯಕ್ವಾಡ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 11 ಓವರ್ಗಳಾಗುವಷ್ಟರಲ್ಲಿ ಟೀಮ್ ಇಂಡಿಯಾ ಮೊತ್ತ 100ರ ಗಡಿದಾಟಿತು.
ಟೀಮ್ ಇಂಡಿಯಾ ಮೊತ್ತ ನೂರರ ಗಡಿದಾಟುತ್ತಿದ್ದಂತೆ ಅಬ್ಬರಿಸಲಾರಂಭಿಸಿದ ಅಭಿಷೇಕ್ ಶರ್ಮಾ 46 ಎಸೆತಗಳಲ್ಲಿ ಶತಕ ಪೂರೈಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ರಿಂಕು ಸಿಂಗ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 22 ಎಸೆತಗಳನ್ನು ಎದುರಿಸಿದ ರಿಂಕು 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಅಜೇಯ 48 ರನ್ ಸಿಡಿಸಿದರು. 47 ಎಸೆತಗಳನ್ನು ಎದುರಿಸಿದ ರುತುರಾಜ್ ಗಾಯಕ್ವಾಡ್ ಅಜೇಯ 77 ರನ್ ಬಾರಿಸಿದರು. ಪರಿಣಾಮ ಟೀಮ್ ಇಂಡಿಯಾ ಮೊತ್ತ 234 ರನ್ಗೆ ಬಂದು ನಿಂತಿತು
ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅಂತಿಮ 10 ಓವರ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. 2007 ರಲ್ಲಿ ಕೀನ್ಯಾ ವಿರುದ್ಧದ ಟಿ20 ಪಂದ್ಯದಲ್ಲಿ ಶ್ರೀಲಂಕಾ ಬ್ಯಾಟರ್ಗಳು ಕೊನೆಯ 10 ಓವರ್ಗಳಲ್ಲಿ 159 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.
ಇದೀಗ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಈ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. ಮೊದಲ 10 ಓವರ್ಗಳಲ್ಲಿ 74 ರನ್ ಬಾರಿಸಿದ್ದ ಭಾರತೀಯ ಬ್ಯಾಟರ್ಗಳು, ಕೊನೆಯ 10 ಓವರ್ಗಳಲ್ಲಿ ಬರೋಬ್ಬರಿ 160 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಂತಿಮ ಹತ್ತು ಓವರ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.