ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ- ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ವಿವಾಹವು ಶುಕ್ರವಾರ (ಜುಲೈ 12) ಅದ್ಧೂರಿಯಾಗಿ ನಡೆದಿದೆ. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಆಶೀರ್ವದಿಸಿದರು. ಅಂಬಾನಿ ಕುಟುಂಬದ ಮದುವೆ ಸಮಾರಂಭದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಅನೇಕ ನಾಯಕರು ಕಾಣಿಸಿಕೊಂಡರು. ಪ್ರತಿದಿನ ಅಂಬಾನಿ ವಿರುದ್ಧ ಆರೋಪ ಮಾಡುತ್ತಿದ್ದ ರಾಜಕಾರಣಿಗಳು ಈಗ ಅವರ ಪುತ್ರನ ಮದುವೆಯಲ್ಲಿ ಭಾಗಿಯಾಗಿದ್ದಾರೆ.
ಟಿಎಂಸಿ ಪಕ್ಷದ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಮಗ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿವಾಹದಲ್ಲಿ ಭಾಗವಹಿಸಿದ್ದರು. ಶಿವಸೇನಾ (ಯುಬಿಟಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಎನ್‌ಸಿಪಿ (ಶರದ್ ಪವಾರ್) ಹಿರಿಯ ನಾಯಕಿ ಸುಪ್ರಿಯಾ ಸುಳೆ ಕೂಡ ಮದುವೆಯಲ್ಲಿ ಉಪಸ್ಥಿತರಿದ್ದರು.
ಅನಂತ್- ರಾಧಿಕಾ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್‌ನ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಅಜಯ್ ಮಾಕನ್, ಸಲ್ಮಾನ್ ಖುರ್ಷಿದ್, ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜೀವ್ ಶುಕ್ಲಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ನಾಯಕರು ಉಪಸ್ಥಿತರಿದ್ದರು.