ದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ಆಘಾತದಿಂದ ಬಿಜೆಪಿ ಇನ್ನೂ ಹೊರ ಬಂದಿಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ ಬಿಜೆಪಿಗೆ ಬಹುಮತ ಲಭಿಸದೇ ಇರುವುದು ಪಕ್ಷದ ಒಳಗೆ ತಳಮಳ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜುಲೈ 18) ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪಲಿದ್ದು, ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ.
2027ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಲೇ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ. ಅದರ ಜತೆಗೆ ಪಕ್ಷಕ್ಕೆ ತಕ್ಷಣದ ಸವಾಲು ಎಂಬಂತೆ ರಾಜ್ಯದ 10 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಎದುರಾಗಿದೆ. ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಈ ಉಪಚುನಾವಣೆಯಲ್ಲಿ ಪಕ್ಷ ತನ್ನ ಸಾಮರ್ಥ್ಯ ತೋರಿಸಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಚುನಾವಣಾ ಆಯೋಗ ಇನ್ನೂ ದಿನಾಂಕ ಘೋಷಿಸಿಲ್ಲ. ಅದಾಗ್ಯೂ ಬಿಜೆಪಿ ತಲೆಕೆಡಿಸಿಕೊಂಡಿದೆ. ಈ ಮಧ್ಯೆ ಈ ಉಪಚುನಾವಣೆಯಲ್ಲೂ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳೂ ಹರಡಿದೆ.
ಇದರ ಜತೆಗೆ ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಿಎಂ ಯೋಗಿ ಆದಿತ್ಯಾನಾಥ್ ಮತ್ತು ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರಿ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಅದೂ ಅಲ್ಲದೇ ಚುನಾವಣೆಯಲ್ಲಿನ ಹಿನ್ನಡೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡವಾಗಲಿದೆ ಎಂಬ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಇಂದಿನ ಸಭೆ ಕುತೂಹಲ ಮೂಡಿಸಿದೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.