ಬೆಂಗಳೂರು: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶನಿವಾರ ಲೋಕಾಯುಕ್ತರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದ ಪೊಲೀಸ್ ವಿಭಾಗವು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿತ್ತು. ಅದರಂತೆ ಮಾಜಿ ಸಿಎಂ ಇಂದು ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದರು.
ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಕ್ರಮ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ತನಿಖೆಯನ್ನು ತ್ವರಿತಗೊಳಿಸುವಂತೆ ಲೋಕಾಯುಕ್ತರನ್ನು ಕೋರಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಅವರು ಬೆಂಗಳೂರು ಉತ್ತರ ಕಸಬಾ ಹೋಬಳಿಯ ಗಂಗೇನಹಳ್ಳಿಯಲ್ಲಿ 1.11 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿರುವ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ಈ ಭೂಮಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 1976 ರಲ್ಲಿ ಲೇಔಟ್ ಮಾಡಲು ಸ್ವಾಧೀನಪಡಿಸಿಕೊಂಡಿತು ಮತ್ತು ಅದರ ಸ್ವಾಧೀನ ಪ್ರಕ್ರಿಯೆಯು 1977 ರಲ್ಲಿ ಪೂರ್ಣಗೊಂಡಿತು. 2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ.
ಡಿನೋಟಿಫಿಕೇಷನ್ ಬಳಿಕ 2010ರ ಜುಲೈನಲ್ಲಿ ಕುಮಾರಸ್ವಾಮಿ ಅವರ ಸೋದರಮಾವ ಚನ್ನಪ್ಪ ಅವರ ಹೆಸರಿಗೆ ಜಮೀನು ನೋಂದಣಿಯಾಗಿದೆ ಎಂದು ಸಚಿವರು ಆರೋಪಿಸಿದ್ದರು.